ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಒಂದು ಕ್ಷಣವೂ ಬಿಡುವು ನೀಡದೆ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಇಂದು ಮಲೆನಾಡು ಭಾಗದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೂ ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆ ಆಗುತ್ತಿದ್ದು, ಹಲವೆಡೆ ಜಲಾವೃತವಾಗಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಲಾಟ್ ಗಾಂಧಿ ಮೈದಾನದಲ್ಲಿದ್ದ ಕಾರುಗಳು ಜಲಾವೃತವಾಗಿದ್ದು, ಜನರ ಸಂಚಾರಕ್ಕೂ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಹಾಮಳೆಗೆ ಮಲೆನಾಡಿಗರು ಅಕ್ಷರಶಃ ಕಂಗಾಲಾಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತುಂಗಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಳ್ಳ -ಕೊಳ್ಳ ಕೂಡಾ ಉಕ್ಕಿ ಹರಿಯಲು ಪ್ರಾರಂಭಿಸಿವೆ. ತುಂಗಾ ನದಿಯ ನೀರು ಹೊಲ, ಗದ್ದೆ, ತೋಟಗಳಿಗೆ ನುಗ್ಗಿದೆ.
ಇದನ್ನೂ ಓದಿ : ಚಿಕ್ಕಮಗಳೂರು: ಧಾರಾಕಾರ ಮಳೆ, ಉಕ್ಕಿ ಹರಿದ ತುಂಗೆ; ರಸ್ತೆಗಳು ಜಲಾವೃತ - TUNGA RIVER OVERFLOWS